
ಮೈಸೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಸೆ.7ರಿಂದ 19ರವರೆಗೆ ನಗರದ 7 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಹೀಗಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.
ಪೂರಕ ಪರೀಕ್ಷೆಗಳು ನಗರದ ಜೆಎಲ್ಬಿ ರಸ್ತೆಯಲ್ಲಿರುವ ಮಹಾರಾಜ ಕಾಲೇಜು, ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮಹಾರಾಣಿ ಸರ್ಕಾರಿ ಪ.ಪೂ. ಕಾಲೇಜು, ಸಯ್ಯಾಜಿರಾವ್ ರಸ್ತೆಯಲ್ಲಿರುವ ಡಿ.ಬನುಮಯ್ಯ ಕಾಲೇಜು, ಬನ್ನಿಮಂಟಪದ ಸಂತ ಫಿಲೋಮಿನಾ ಕಾಲೇಜು, ಕೃಷ್ಣಮೂರ್ತಿಪುರಂನ ಶಾರದಾ ವಿಲಾಸ ಪ.ಪೂ.ಕಾಲೇಜು, ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜು, ಜಯಲಕ್ಷ್ಮಿಪುರಂನಲ್ಲಿರುವ ಮಹಾಜನ ಕಾಲೇಜಿನಲ್ಲಿ ನಡೆಯಲಿದೆ.
ಪೂರಕ ಪರೀಕ್ಷೆ ಹಿನ್ನೆಲೆಯಲ್ಲಿ ಸೆ.7ರಿಂದ 19ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಸಿಆರ್ಪಿಸಿ 144 ಕಲಂ ಅನ್ವಯ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.