ಬೆಂಗಳೂರು: ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆಯಲ್ಲಿರುವ ಪ್ರೆಸಿಡೆನ್ಸಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಪೋಷಕರು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕನ್ನಡ ಭಾಷಾ ಕಲಿಕಾ ಅಧಿನಿಯಮದ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆಸುತ್ತಿರುವುದು ಕನ್ನಡ ಪ್ರೇಮಿಗಳಲ್ಲಿ ಆಕ್ರೋಶವನ್ನುಂಟು ಮಾಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಕಳವಳ ವ್ಯಕ್ತಪಡಿಸಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಕರ್ನಾಟಕದ ಶಾಲೆಗಳಲ್ಲಿ ತಮ್ಮ ಮಕ್ಕಳಿಗೆ ಶಿಕ್ಷಣ ಕಲಿಸಲು ಇಚ್ಛಿಸುವುದಿಲ್ಲವೋ ಅವರು ಕರ್ನಾಟಕದಲ್ಲಿರಲು ಅರ್ಹರಲ್ಲ ಎಂದು ಗುಡುಗಿದ್ದಾರೆ.
ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆಯಲ್ಲಿರುವ ಪ್ರೆಸಿಡೆನ್ಸಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಪೋಷಕರು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕನ್ನಡ ಭಾಷಾ ಕಲಿಕಾ ಅಧಿನಿಯಮದ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆಸಿರುವುದು ಸರಿಯಾದ ಕ್ರಮವಲ್ಲ. ಹಾಗಾಗಿ ಈ ಬಗ್ಗೆ ಸೂಕ್ತ ಕ್ರಮವಹಿಸುವಂತೆ ಒತ್ತಾಯಿಸಿದ್ದಾರೆ.
ಪ್ರಸ್ತುತ ಕಾಯಿದೆಯಲ್ಲಿ ಮಕ್ಕಳ ಮೇಲೆ ಭಾಷಾ ಕಲಿಕೆಯನ್ನು ಹೇರುತ್ತಿಲ್ಲ. ಬದಲಿಗೆ ಸಂವಿಧಾನ ಬದ್ಧವಾಗಿ ಹಂತ ಹಂತವಾಗಿ ಮಕ್ಕಳಿಗೆ ಭಾಷೆಯ ಕಲಿಕೆಯಲ್ಲಿ ತೊಡಗಿಸಲಾಗುತ್ತಿದೆ. ಕರ್ನಾಟಕ ಸರ್ಕಾರ ಕನ್ನಡ ಭಾಷಾ ಕಲಿಕಾ ಅಧಿನಿಯಮ-2017ರನ್ವಯ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಗಳು ಕನ್ನಡವನ್ನು ಪ್ರಥಮ, ದ್ವಿತೀಯ ಭಾಷೆಯಾಗಿ ಕಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಕೇಂದ್ರ ಪಠ್ಯಕ್ರಮದ ಸಿ.ಬಿ.ಎಸ್.ಇ, ಐ.ಸಿ.ಎಸ್.ಇ. ಸೇರಿದಂತೆ ಇತರೆ ಎಲ್ಲಾ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಕೆಲವು ಹೊರ ರಾಜ್ಯದ ಪೋಷಕರು ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಆನ್ಲೈನ್ ಪಿಟೀಷನ್ ಮೂಲಕ ಸಹಿ ಸಂಗ್ರಹ ಅಭಿಯಾನ ಆರಂಭಿಸಿರುವುದು ದುರಾದೃಷ್ಟಕರ.
ಅನಿವಾರ್ಯ ಕಾರಣಗಳಿಂದಾಗಿ ರಾಜ್ಯದಲ್ಲಿ ನೆಲೆಸಿರುವ ಜನರು ಅರ್ಥೈಸಿಕೊಳ್ಳಬೇಕು. ಯಾವುದನ್ನು ತಪ್ಪಾಗಿ ಗ್ರಹಿಸಿ ಭಾಷಾ ಸೌಹಾರ್ದತೆಗೆ ತೊಡಕುಂಟಾಗದಂತೆ ನಡೆದುಕೊಳ್ಳಬೇಕು ಎಂದು ಪೋಷಕರಿಗೆ ತಿಳಿಸಿದ್ದಾರೆ. ಕನ್ನಡ ಕಲಿಕಾ ಅಧಿನಿಯಮವನ್ನು ರಾಜ್ಯದ ಎಲ್ಲ ಶಾಲೆಗಳಲ್ಲೂ ಕಡ್ಡಾಯವಾಗಿ ಜಾರಿಗೊಳಿಸುವಂತೆಯೂ ಅವರು ಶಿಕ್ಷಣ ಸಚಿರಾದ ಎಸ್.ಸುರೇಶ್ ಕುಮಾರ್ ಅವರನ್ನು ಆಗ್ರಹಿಸಿದ್ದಾರೆ.