ಇಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ಜುಲೈ 28) ಬೆಳಗ್ಗೆ 11 ಗಂಟೆಗೆ ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನಿನ್ನೆ (ಜುಲೈ 27) ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವೀಕ್ಷಕರು, ಕರ್ನಾಟಕ ಬಿಜೆಪಿ ಉಸ್ತುವಾರಿ ಹಾಗೂ ಬಿಜೆಪಿ ಶಾಸಕರ ಸಮ್ಮುಖದಲ್ಲಿ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಎಂದು ಘೋಷಣೆ ಮಾಡಲಾಗಿದೆ. ಸ್ವತಃ ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಎಂದು ಘೋಷಿಸಿದ್ದಾರೆ. ನಗರದ ಖಾಸಗಿ ಹೊಟೇಲ್​ನಲ್ಲಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಪ್ರಮಾಣವಚನ ಸಮಾರಂಭ ನಡೆಯಲಿದೆ.
ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯಿಂದ ಹಕ್ಕು ಮಂಡನೆ ಮಾಡಲಾಗಿದೆ. ನೂತನ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್​ಗೆ ಮನವಿ ಮಾಡಲಾಗಿದೆ. ಸರ್ಕಾರ ರಚನೆಗೆ ರಾಜ್ಯಪಾಲ ಗೆಹಲೋತ್ ಒಪ್ಪಿಗೆ ನೀಡಿದ್ದಾರೆ. ಉಸ್ತುವಾರಿ ಸಿಎಂ ಬಿಎಸ್‌ವೈ ಹಾಗೂ ಇತರ ಕೆಲವು ನಾಯಕರು ಉಪಸ್ಥಿತರಿದ್ದರು.


ಸಿಎಂ ಹೆಸರು ಘೋಷಣೆ ಬೆನ್ನಲ್ಲೇ ಐವರು ನಾಯಕರ ಜೊತೆ ನಿಯೋಜಿತ ಸಿಎಂ ಬೊಮ್ಮಾಯಿ ರಾಜಭವನಕ್ಕೆ ಆಗಮಿಸಿದ್ದರು. ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಬೊಮ್ಮಾಯಿ ಆಗಮಿಸಿದ್ದರು. ಉಸ್ತುವಾರಿ ಸಿಎಂ ಯಡಿಯೂರಪ್ಪ ಜೊತೆ ರಾಜಭವನಕ್ಕೆ ಬಂದು ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.


ನೂತನ ಸಿಎಂ ಆಗಿ ಆಯ್ಕೆ ಮಾಡಿದ್ದಕ್ಕಾಗಿ ಬಸವರಾಜ ಬೊಮ್ಮಾಯಿ (Basavaraj Bommai) ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾಗೆ ಧನ್ಯವಾದ ತಿಳಿಸಿದ್ದಾರೆ. ನನ್ನ ಹೆಸರನ್ನು ಸೂಚಿಸಿ ಬಿ.ಎಸ್‌ ಯಡಿಯೂರಪ್ಪ ಆಶೀರ್ವಾದ ಮಾಡಿದ್ದಾರೆ. ನನ್ನನ್ನು ಮುಖ್ಯಮಂತ್ರಿಯಾಗಿ ಆರಿಸಿದ ಪಕ್ಷದ ಎಲ್ಲಾ ಶಾಸಕರಿಗೆ ಹೃದಯಪೂರ್ವಕ ಧನ್ಯವಾದಗಳು. ಪಕ್ಷದ ನಾಯಕರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ. ರಾಜ್ಯವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸುವೆ. ಕೊವಿಡ್ ನಿಯಂತ್ರಿಸಲು ಹಗಲಿರುಳು ಶ್ರಮಿಸುತ್ತೇನೆ ಎಂದು ಅವರು ನೂತನ ಮುಖ್ಯಮಂತ್ರಿ ಆದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *